ಮಹಾನಗರ: ನಗರದ ವಿವಿಧ ದೇವಸ್ಥಾನಗಳಲ್ಲಿ ಸಂಕ್ರಾಂತಿ ಪ್ರಯುಕ್ತ ಸೋಮವಾರ ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು. ಸಾವಿರಾರು ಭಕ್ತರು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕೊಡಿಯಾಲಬೈಲ್ನ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದಲ್ಲಿ ಚಂಡಿಕಾ ಹೋಮ ಸೋಮವಾರ ನೆರವೇರಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಮಧ್ಯಾಹ್ನ 12ಗಂಟೆಗೆ ಪೂರ್ಣಾಹುತಿ ನಡೆದು ಅನ್ನಸಂತರ್ಪಣೆ ನೆರವೇರಿತು. ಕ್ಷೇತ್ರದ ಆಚಾರಪಟ್ಟವರು, ಗುರಿಕಾರರು, ಮೊಕ್ತೇಸರರು ಮೊದಲಾದವರು ಉಪಸ್ಥಿತರಿದ್ದರು.
ಹಳೆಕೋಟಿ ಶ್ರೀ ಮಾರಿಯಮ್ಮ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಮಹಾಚಂಡಿಕಾ ಯಾಗ ವಿಶೇಷ ಹೂವಿನ ಪೂಜೆ ನಡೆಯಿತು. ಗೂಡ್ಸ್ ಶೆಡ್ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪುರೋಹಿತ ಪ್ರಭಾಕರ್ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಸಡಗರದಿಂದ ನಡೆಯಿತು.